ರಾಜಭವನದ ಅಂಗಳದಲ್ಲಿ ಚೆಂಡು: ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ

ಬೆಂಗಳೂರು: ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಹಗ್ಗ ಜಗ್ಗಾಟ ಎರಡೂ ಕಡೆಯಿಂದಲೂ ಬುಧವಾರವೂ ಮುಂದುವರೆದಿದೆ.

ಸರ್ಕಾರ ರಚನೆಗೆ ಬಿಜೆಪಿ ಶಾಸಾಕಾಂಗ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಜೆಡಿಎಸ್ ಕೂಡ ನಮಗೆ ಆಹ್ವಾನ ನೀಡಬೇಕೆಂದು ರಾಜ್ಯಪಾಲರಿಗೆ ಒತ್ತಡ ಹೇರುತ್ತಿದೆ. ಇದೀಗ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ರಾಜ್ಯ ರಾಜಕಾರಣದ ಭವಿಷ್ಯ ನಿಂತಿದೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಬುಧವಾರ ಬೆಳಗಿನಿಂದಲೇ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದವು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದಲ್ಲಿ ಮುಖಂಡರು ಸಭೆ ನಡೆಸಿದರು. ಬಳಿಕ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಸಲಾಯಿತು. ಇತ್ತ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಉಸ್ತುವಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಸಲಾಯಿತು.

ಮತ್ತೊಂದೆಡೆ ಜೆಡಿಎಸ್ ಕೂಡ ಖಾಸಗಿ ಹೋಟೆಲ್‍ನಲ್ಲಿ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

ಆಪರೇಷನ್ ಭೀತಿಗೆ ಒಳಗಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ತನ್ನೆಲ್ಲ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಮುಂದಾಗಿದ್ದಾರೆ. ಬಿಡದಿ ಸಮೀಪವಿರುವ ಈಗಲ್‍ಟನ್ ರೆಸಾರ್ಟ್‍ಗೆ ಉಭಯ ಪಕ್ಷಗಳ ಶಾಸಕರನ್ನು ಕರೆದೊಯ್ಯಲು ತೀರ್ಮಾನಿಸಲಾಗಿದೆ. ಶಾಸಕ ಜಮೀರ್ ಅಹಮ್ಮದ್ ಅವರ ಬಸ್‍ನಲ್ಲಿ ಈ ಎಲ್ಲ ಶಾಸಕರು ಸಂಜೆ ವೇಳೆಗೆ ರೆಸಾರ್ಟ್ ತಲುಪಲಿದ್ದಾರೆ. ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ರಾಜ್ಯ ರಾಜಕಾರಣದ ಭವಿಷ್ಯ ನಿಂತಿದೆ.

ಸಂಬಧಿಸಿದ ಪೋಸ್ಟ್‌ಗಳು

Leave a Reply

Your email address will not be published. Required fields are marked *